ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಸಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದಲ್ಲಿ ಹೈಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ.
ಅರ್ಜಿದಾರರ (ಸಿದ್ದರಾಮಯ್ಯ) ಕುಟುಂಬಕ್ಕೆ ಸೇರಿದವರೇ (ಪತ್ನಿ) ಫಲಾನುಭವಿಯಾಗಿರುವ ಹಿನ್ನೆಲೆಯಲ್ಲಿ ತನಿಖೆ ಅಗತ್ಯವಾಗಿದೆ ಎಂದು ಹೈಕೋರ್ಟ್ ಸುದೀರ್ಘ 197 ಪುಟಗಳ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ಕಾರಣ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 218ರಡಿ ಅನುಮತಿ ನೀಡಿ ರಾಜ್ಯಪಾಲರು 2024 ಆಗಸ್ಟ್ 16ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ರದ್ದು ಪಡಿಸುವಂತೆ ಕೋರಿಸಿದ್ದ ರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಸೆ. 12ರಂದು ಕಾದಿರಿಸಿದ್ದ ತೀರ್ಪನ್ನು ಮಂಗಳವಾರ ಮಧ್ಯಾಹ್ನ 12 ಗಂಟೆ 08 ನಿಮಿಷಕ್ಕೆ ಪ್ರಕಟಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಖ್ಯಮಂತ್ರಿಗಳ ಅರ್ಜಿ ವಜಾಗೊಳಿಸಿ, ರಾಜ್ಯಪಾಲರ ಆದೇಶ ಎತ್ತಿಹಿಡಿಯಿತು.